ಶಿಕಾರಿಪುರ ಲೈವ್:
ಶಿಕಾರಿಪುರ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ಹಾಗೂ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಜಾನಪದ ಪರಿಷತ್, ತಾಲೂಕು ಸಾಂಸ್ಕೃತಿಕ ವೇದಿಕೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜಾನಪದ ಗಾಯನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ಉಮೇಶ್, ಜಾನಪದ ಕಲೆಗಳು ನಾಡಿನ ಸಂಸ್ಕೃತಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಜಾನಪದ ಸೊಗಡು ಮಾಯವಾಗುತ್ತಿದೆ. ಜಾನಪದ ಸಂಸ್ಕೃತಿಯನ್ನು ಯುವ ಪೀಳಿಗೆ ಉಳಿಸಿ ಬೆಳೆಸಬೇಕು. ಡೊಳ್ಳುಕುಣಿತ, ಕೋಲಾಟ, ಗಾಯನ ಸೇರಿದಂತೆ ವಿವಿಧ ಜಾನಪದ ಕಲೆಗಳಲ್ಲಿ ನೀವು ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಜಾನಪದ ಪರಿಷತ್ ಬಿ.ಪಾಪಯ್ಯ ಮಾತನಾಡಿ, ನಶಿಸುತ್ತಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಜಾನಪದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ನೀವು ಜಾನಪದ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ಅತಿಯಾದ ಮೊಬೈಲ್ ಬಳಕೆಯಿಂದ ದೂರವಿದ್ಧು, ಉತ್ತಮ ಶಿಕ್ಷಣ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಕಲಾವಿದರಾದ ಜ್ಯೋತಿ ಗಾಮ, ಶಿವಕುಮಾರ್, ಹನುಮಂತಪ್ಪ ಜಾನಪದ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಪ್ರದರ್ಶಿಸಿದರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೆ.ಎಸ್. ಹುಚ್ರಾಯಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು, ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ಸುಮೇದ, ಜಾನಪದ ಪರಿಷತ್ ಕಾರ್ಯದರ್ಶಿಗಳಾದ ಎಂ.ಎಚ್. ಸತ್ಯನಾರಾಯಣ್, ಲೋಕೇಶ್ ಮಕ್ರಿ, ಪದಾಧಿಕಾರಿಗಳಾದ ಡಾ.ಈಶ್ವರ್, ಗುರುದೇವ್, ಸುರೇಶ್, ಕೊಟ್ರೇಶಪ್ಪ ಮತ್ತಿತರರು ಉಪಸ್ಥಿತರಿದ್ದರು.
Leave a comment