ಶಿಕಾರಿಪುರ ಲೈವ್:
ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪ್ರಕರಣದ ಬಗ್ಗೆ ಗೃಹಸಚಿವರು ಸಮಗ್ರ ತನಿಖೆ ನಡೆಸುವ ಮೂಲಕ ಅವರ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಕಾಂಗ್ರೆಸ್ ಶಾಸಕ ಹಾಗೂ ಕಾರ್ಯಕರ್ತರ ಕಿರುಕುಳದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿನಯ್ ಸೋಮಯ್ಯ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ನೋವಿನ ಸಂಗತಿ ಹಾಗೂ ದುರ್ದ್ಯೇವವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಕಾರ್ಯಕರ್ತರ ಮೇಲೆ ವಿನಾಃ ಕಾರಣ ಮೊಕದ್ದಮೆ ದಾಖಲಿಸುತ್ತಿರುವುದು ಕಿರುಕುಳ ನೀಡುತ್ತಿರುವುದು ಕಂಡು ಬರುತ್ತಿದೆ ಎಂದು ಆರೋಪಿಸಿದರು.
ವಿನಯ್ ಸೋಮಯ್ಯ ಮೇಲೆ ಒತ್ತಡ ಕಿರುಕುಳ ಆಗಿರುವುದು ಡೆತ್ ನೋಟ್ ನಿಂದ ಕಂಡು ಬರುತ್ತಿದೆ. ರಾಜ್ಯ ಗೃಹ ಸಚಿವರು ಬಿಜೆಪಿ ಕಾರ್ಯಕರ್ತ ಎನ್ನುವುದಕ್ಕಿಂತ ಮಾನವೀಯತೆಯ ದೃಷ್ಠಿ ಮೇಲೆ ಈ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಆತ್ಮಹತ್ಯೆ ಹಿಂದೆ ಶಾಸಕರಿದ್ದರೂ ಅಥವಾ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್, ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.
Leave a comment