ಶಿಕಾರಿಪುರ ಲೈವ್ : ತಾಲ್ಲೂಕಿನ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಆಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆವರು ಮಾತನಾಡಿದರು.
ಬೇಸಿಗೆಗಾಲ ಆರಂಭವಾಗಿದ್ದು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಆಧಿಕಾರಿಗಳು ಎಚ್ಚರ ವಹಿಸಬೇಕು. ಏತನೀರಾವರಿ ಕಾಮಗಾರಿ ಬಾಕಿ ಇದ್ದರೆ ಪೂರ್ಣಗೊಳಿಸಬೇಕು. ಕಾಮಗಾರಿಗೆ ಆನುದಾನದ ಅಗತ್ಯ ಇದ್ದರೆ ತಿಳಿಸಬೇಕು. ಸರ್ಕಾರದಿಂದ ಅನುದಾನ ಕೊಡಿಸುವ ಪ್ರಯತ್ನ ಮಾಡುತ್ತೇನೆ. ಜಲಜೀವನ್ ಮಿಷಿನ್ ಕಾಮಗಾರಿ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಬೇಕು. ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ವಿತರಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಅರ್ಹತೆ ಇದ್ದರವರಿಗೆ ತಲುಪಿಸಬೇಕು ಎಂದು ಆಧಿಕಾರಿಗಳಿಗೆ ಸೂಚಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಶಿಕ್ಷಕರು ಶ್ರಮ ಹಾಕಬೇಕು. ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ತೆಗೆದುಕೊಳ್ಳಬೇಕು. ಮಕ್ಕಳಿಗೆ ಪರೀಕ್ಷೆ ಬಗ್ಗೆ ಭಯ ಬಾರದಂತೆ ವಿಶ್ವಾಸ ತುಂಬಬೇಕು. ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಲು ಪೂರಕ ವಾತಾವರಣ ನಿರ್ಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ ಆವರಿಗೆ ಸೂಚಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ ಪ್ರತಿಕ್ರಿಯಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗುತ್ತಿದೆ. ಪೋಷಕರೊಂದಿಗೆ ಸಭೆ ನಡೆಸಲಾಗುತ್ತಿದೆ. ಪರೀಕ್ಷೆ ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.
ಸಾಗರ ಉಪವಿಭಾಗಧಿಕಾರಿ ಆರ್. ಯತೀಶ್,
ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಟರಾಜ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್.ಪಿ. ನಾಗರಾಜ್ ಗೌಡ್ರು, ತಾಲ್ಲೂಕು ಪಂಚಾಯಿತಿ ಇಒ ಎನ್.ಜಿ. ನಾಗರಾಜ್, ಡಿವೈಎಸ್ ಪಿ ಕೇಶವ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Leave a comment