ಶಿಕಾರಿಪುರ ಲೈವ್:
ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ 14ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.
ಶ್ರೀನಿವಾಸ ಕಲ್ಯಾಣೋತ್ಸವದ ಪ್ರಯುಕ್ತ ಮಂಗಳವಾರ ಶ್ರೀನಿವಾಸ ಸ್ವಾಮಿಯ ಚರಮೂರ್ತಿಗಳ ಭವ್ಯವಾದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಬುಧವಾರ ಬೆಳಗ್ಗೆ ಶ್ರೀನಿವಾಸ ದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ ಪ್ರಯುಕ್ತ ಭಕ್ತರಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ 50 ವರ್ಷ ಪೂರೈಸಿದ ದಂಪತಿಗಳನ್ನು ಸನ್ಮಾನಿಸಲಾಯಿತು.
ಧರ್ಮಸಭೆಯ ಸಾನಿಧ್ಯ ವಹಿಸಿದ್ದ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ನೆಮ್ಮದಿ ನೀಡುತ್ತವೆ. ಸವಿತಾ ಸಮಾಜ ಸಣ್ಣ ಸಮಾಜವಾಗಿದ್ದರು ಕೂಡ ಪ್ರತಿ ವರ್ಷ ಶ್ರೀನಿವಾಸ ಕಲ್ಯಾಣೋತ್ಸವವನ್ನು ವಿಜೃಂಭಣೆಯಿಂದ ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಸಣ್ಣ ಸಮಾಜಗಳು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಸವಿತಾ ಸಮಾಜ ಅಭಿವೃದ್ಧಿ ನಿಗಮ ಅಧ್ಯಕ್ಷ ಮುತ್ತುರಾಜ್, ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಅಧ್ಯಕ್ಷ ವಿ.ರಾಮಣ್ಣ, ಸವಿತಾ ಸಮಾಜ ಜಿಲ್ಲಾಧ್ಯಕ್ಷ ಬಾಲರಾಜ್, ತಾಲೂಕು ಅಧ್ಯಕ್ಷ ಸತ್ಯನಾರಾಯಣ್, ಸವಿತಾ ಯುವಕ ಸಂಘದ ಅಧ್ಯಕ್ಷ ವಿ. ಗೋಪಿ, ಸವಿತಾ ವಿವಿಧೋದ್ದೇಶ ಸಹಕಾರ ಸಂಘ ವೀರಭದ್ರಪ್ಪ,ಸವಿತಾ ಮಹಿಳಾ ಸಂಘ ಅಧ್ಯಕ್ಷ ಕವಿತಾ, ಎಲ್ಲಮ್ಮ ದೇವಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸವಿತಾ ಸಮಾಜ ಮುಖಂಡರು ಉಪಸ್ಥಿತರಿದ್ದರು.
Leave a comment